ಕರಾವಳಿ–ಮಲೆನಾಡು: ವಿಶೇಷ ನೀತಿ ರೂಪಿಸಲು ಸರಕಾರ ಸಜ್ಜು
ರಾಜ್ಯ ಸರಕಾರವು ‘ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026’ ರೂಪಿಸಲು ಮುಂದಾಗಿದೆ. ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಸಂಬಂಧ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳನ್ನು ದೇಶ-ವಿದೇಶದ ಪ್ರಮುಖ ಪ್ರವಾಸಿ ತಾಣಗಳನ್ನಾಗಿ ರೂಪಿಸುವ ಉದ್ದೇಶದಿಂದ ರಾಜ್ಯ ಸರಕಾರವು ‘ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026’ ರೂಪಿಸಲು ಮುಂದಾಗಿದೆ. ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಸಂಬಂಧ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಈ ಹೊಸ ನೀತಿಯು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಿದೆ. ಕರಾವಳಿ ಮತ್ತು ಮಲೆನಾಡಿನ ನೈಸರ್ಗಿಕ ಸೌಂದರ್ಯ, ಜೈವ ವೈವಿಧ್ಯ, ಧಾರ್ಮಿಕ ತಾಣಗಳು, ಸಾಹಸ ಪ್ರವಾಸೋದ್ಯಮ ಹಾಗೂ ಸ್ಥಳೀಯ ಸಂಸ್ಕೃತಿಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಅಂತಾರಾಷ್ಟ್ರೀಯ ಕ್ರೂಸ್ ಪ್ರವಾಸೋದ್ಯಮಕ್ಕೆ ಉತ್ತೇಜನ
ಕರ್ನಾಟಕದ ಬಂದರು ನಗರಗಳಿಗೆ ಹೆಚ್ಚಿನ ಅಂತಾರಾಷ್ಟ್ರೀಯ ಕ್ರೂಸ್ ಹಡಗುಗಳನ್ನು ಆಕರ್ಷಿಸಲು ವಿಶೇಷ ಕಾರ್ಯತಂತ್ರ ರೂಪಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮಂಗಳೂರು ಸೇರಿದಂತೆ ಕರಾವಳಿ ಬಂದರುಗಳನ್ನು ಜಾಗತಿಕ ಕ್ರೂಸ್ ಪ್ರವಾಸೋದ್ಯಮದ ಪ್ರಮುಖ ತಾಣಗಳಾಗಿ ಬೆಳೆಸುವ ಗುರಿಯನ್ನು ಸರಕಾರ ಹೊಂದಿದ್ದು, ಇದರಿಂದ ಪ್ರವಾಸೋದ್ಯಮ ಮಾತ್ರವಲ್ಲದೆ ಸ್ಥಳೀಯ ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆಗಳಿಗೂ ಉತ್ತೇಜನ ಸಿಗಲಿದೆ.

ಸ್ಥಳೀಯ ಸಮುದಾಯಕ್ಕೂ ಲಾಭ
ಪ್ರವಾಸೋದ್ಯಮದ ಬೆಳವಣಿಗೆಯೊಂದಿಗೆ ಸ್ಥಳೀಯ ಸಮುದಾಯಗಳಿಗೂ ನೇರ ಆರ್ಥಿಕ ಲಾಭ ದೊರೆಯುವಂತೆ ಸಮುದಾಯ ಆಧಾರಿತ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುತ್ತದೆ. ಹೋಂಸ್ಟೇಗಳು, ಸ್ಥಳೀಯ ಆಹಾರ, ಕರಕುಶಲ ವಸ್ತುಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಗ್ರಾಮೀಣ ಪ್ರವಾಸೋದ್ಯಮಕ್ಕೆ ವಿಶೇಷ ಪ್ರೋತ್ಸಾಹ ನೀಡುವ ಯೋಜನೆಗೆ ಮುಂದಿದೆ.
ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು
ಪ್ರವಾಸಿ ತಾಣಗಳಲ್ಲಿ ರಸ್ತೆ, ಕುಡಿಯುವ ನೀರು, ಸ್ವಚ್ಛತಾ ವ್ಯವಸ್ಥೆ, ಶೌಚಾಲಯ, ಪಾರ್ಕಿಂಗ್, ಮಾಹಿತಿ ಕೇಂದ್ರಗಳು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಬಲಪಡಿಸಲು ಸರಕಾರ ಯೋಜನೆ ರೂಪಿಸುತ್ತಿದೆ. ಜತೆಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಹಾಗೂ ಜಂಗಲ್ ಲಾಡ್ಜಸ್ ಅಂಡ್ ರೆಸಾರ್ಟ್ಸ್ (JLR) ನಿರ್ವಹಣೆಯಲ್ಲಿರುವ ತಾಣಗಳಲ್ಲಿಯೂ ಸೌಲಭ್ಯಗಳನ್ನು ಹೆಚ್ಚಿಸಲಾಗುತ್ತದೆ.
ಬೀಚ್ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ
ರಾಜ್ಯದ ಸುಂದರ ಕಡಲತೀರಗಳನ್ನು ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸುವ ಯೋಜನೆಗೂ ನೀತಿಯಲ್ಲಿ ಆದ್ಯತೆ ನೀಡಲಾಗಿದೆ. ವಿಶೇಷವಾಗಿ ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆಯುವ ಸಾಮರ್ಥ್ಯವಿರುವ ಕಡಲತೀರಗಳನ್ನು ಅಭಿವೃದ್ಧಿಪಡಿಸಿ ಸ್ವಚ್ಛತೆ, ಸುರಕ್ಷತೆ ಹಾಗೂ ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಸಾಹಸ ಕ್ರೀಡೆಗಳು, ಜಲಕ್ರೀಡೆಗಳು ಮತ್ತು ಪರಿಸರ ಸ್ನೇಹಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಕ್ರಮಗಳೂ ಈ ನೀತಿಯಲ್ಲಿ ಸೇರಲಿವೆ.

ಪ್ರವಾಸೋದ್ಯಮದಲ್ಲಿ ಹೊಸ ಅವಕಾಶ
ಈ ನೀತಿ ಜಾರಿಯಾದ ಬಳಿಕ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಹೂಡಿಕೆ ಹೆಚ್ಚುವ ನಿರೀಕ್ಷೆಯಿದ್ದು, ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗುವ ಸಾಧ್ಯತೆಯಿದೆ. ಪರಿಸರ ಸಂರಕ್ಷಣೆಯೊಂದಿಗೆ ಸುಸ್ಥಿರ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಮೂಲಕ ಕರ್ನಾಟಕವನ್ನು ದೇಶದ ಪ್ರಮುಖ ಪ್ರವಾಸಿ ತಾಣವನ್ನಾಗಿ ರೂಪಿಸುವ ಗುರಿಯನ್ನು ಹೊಂದಿದೆ.